ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರದ ಸಮಾರಂಭಕ್ಕೆ ರಾಜ್ಯ ಸರಕಾರ ಅನುಮತಿಯನ್ನು ನಿರಾಕರಿಸಿದೆ. ಜೂನ್ 14ರಂದು ಕೆಪಿಸಿಸಿ ಪದಗ್ರಹಣ ಸಮಾರಂಭ ನಿಗದಿಯಾಗಿತ್ತು. ಆದ್ರೆ ಕೇಂದ್ರ ಸರಕಾರದ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಅನುಮತಿಯನ್ನು ನಿರಾಕರಿಸಲಾಗಿದೆ.

ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಕ್ಕೆ ಈ ಹಿಂದೆ ಜೂನ್ 7ರಂದು ದಿನಾಂಕ ನಿಗದಿಯಾಗಿತ್ತು. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎರಡು ಬಾರಿ ಪದಗ್ರಹಣ ಸಮಾರಂಭವನ್ನು ಮುಂದೂಡಲಾಗಿತ್ತು. ಆದ್ರೀಗ ಜೂನ್ 14ರಂದು ಪದಗ್ರಹಣ ಸಮಾರಂಭ ನಡೆಸಲು ಉದ್ದೇಶಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರಿಂದ ಡಿಕೆಶಿ ಅಧಿಕಾರವನ್ನು ಹಸ್ತಾಂತರಿಸುವ ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು.

ಆದರೆ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಲು ಅನುಮತಿ ನೀಡಲು ಸಾಧ್ಯವಿಲ್ಲವೆಂದು ರಾಜ್ಯ ಸರಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಇದೀಗ ಮೂರನೇ ಬಾರಿಗೆ ಮುಂದೂಡಿಕೆಯಾಗಿದೆ.