ಉಡುಪಿ : ಕೊರೊನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದೆ. 54 ವರ್ಷದ ವ್ಯಕ್ತಿ ಮನೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿಯ ಗಂಟಲು ದ್ರವದ ತಪಾಸಣೆಯನ್ನು ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮೃತ ವ್ಯಕ್ತಿ ಗುರುವಾರ ಮುಂಬೈನಿಂದ ಉಡುಪಿ ಜಿಲ್ಲೆಗೆ ಆಗಮಿಸಿದ್ದರು. ಕುಂದಾಪುರಕ್ಕೆ ಬಂದಿಳಿದ ಅವರನ್ನು ಥರ್ಮಲ್ ಸ್ಕ್ಯಾನಿಂಗ್ ಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ವ್ಯಕ್ತಿಗೆ ಯಾವುದೇ ಸೋಂಕಿನ ಲಕ್ಷಣ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ತೆಕ್ಕಟ್ಟೆಯಲ್ಲಿರುವ ಅವರ ಮನೆಗೆ ಕಳುಹಿಸಿಕೊಡಲಾಗಿತ್ತು. ಅಲ್ಲದೇ ಹೋಮ್ ಕ್ವಾರಂಟೈನ್ ಗೆ ಒಳಡಿಸಲಾಗಿತ್ತು. ಆದರೆ ಸಂಜೆಯ ವೇಳೆಯಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದರು. ವ್ಯಕ್ತಿಯ ಮರಣೋತ್ತರ ಕಾರ್ಯವನ್ನು ಪಿಪಿಇ ಕಿಟ್ ಬಳಸಿ ಮಾಡಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ.

ಆದರೆ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯನ್ನು ಸಂಪೂರ್ಣ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ ವ್ಯಕ್ತಿಯ ಜೊತೆಗೆ ಊರಿಗೆ ಬಂದಿರುವ ಉಳಿದ ಮೂವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.