ಮಂಗಳೂರು : ಕೊರೊನಾ ಮಹಾಮಾರಿ ಮಂಗಳೂರಲ್ಲಿ ಮತ್ತೊಂದು ಬಲಿ ಪಡೆದಿದೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 60 ವರ್ಷದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಉಳ್ಳಾಲದ ನಿವಾಸಿಯಾಗಿದ್ದ ವೃದ್ದೆಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೃದ್ದೆಯ ಗಂಟಲು ದ್ರವದ ಪರೀಕ್ಷೆಯನ್ನು ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೇ ಉಸಿರಾಟದ ಸಮಸ್ಯೆ ಹೆಚ್ಚಾಗಿತ್ತಿದ್ದಂತೆಯೇ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದ್ರೀಗ ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ.

ನಿನ್ನೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇಂದು ಬೆಳಗ್ಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ಕರಾವಳಿಯಲ್ಲಿ ಕೊರೊನಾ ಮರಣ ಮೃದಂಗವನ್ನು ಬಾರಿಸುತ್ತಿದೆ.