ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗುವಂತಿಲ್ಲ: ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ
RSS Activities: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಷೇಧದ ಸುದ್ದಿ ಚಾಲ್ತಿಯಲ್ಲಿರುವಾಗಲೇ ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಆದೇಶ ಹೊರಬಿದ್ದಿದೆ. ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಯಾವುದೇ ಕಾರ್ಯಚಟುವಟಿಕೆಗಳನ್ನು ನಡೆಸದಂತೆ ಗ್ರಾಮೀಣಾಭಿವೃದ್ಧಿ , ಪಂಚಾಯತ್ರಾಜ್ ಹಾಗೂ ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಆದೇಶ ಹೊರಬಿದ್ದಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರರುಗಳಿಗೆ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದಲ್ಲ.” ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.
Also Read: ಎಸ್ಎಸ್ಎಲ್ಸಿ , ಪಿಯುಸಿ ವಿದ್ಯಾರ್ಥಿಗಳಿಗೆ ಶುಭಸುದ್ದಿ : ಪಾಸಿಂಗ್ ಮಾರ್ಕ್ಸ್ ಕಡಿತ
ಆದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ.
ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಎಂದು ಸುತ್ತೋಲೆ ಹೊರಡಿಸಲಾಗಿದೆ.
Also Read: ದೊಡ್ಡಬಳ್ಳಾಪುರ : ಬಿಪಿಎಲ್ ಕಾರ್ಡ್ ರದ್ದತಿ, ಕರವೇ ಪ್ರತಿಭಟನೆ
ಭಾರತದ ಏಕತೆಯ ನೀತಿಗೆ ಭಂಗ ತಂದು ಧರ್ಮದ ವಿಷಬೀಜ ಬಿತ್ತು ಕಾರ್ಯ ನಡೆಸುತ್ತಿರುವ ಆರ್ಎಸ್ಎಸ್ ವಿರುದ್ಧ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಮೇಲೆ ಪರಿಶೀಲಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಪರ – ವಿರೋಧದ ಚರ್ಚೆ ಆರಂಭವಾಗಿತ್ತು.
ಸದ್ಯ ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ನೋಡಿದರೆ ಶೀಘ್ರದಲ್ಲೇ ರಾಜ್ಯದಲ್ಲಿ ಆರ್ಎಸ್ಎಸ್ ಸಂಘಟನೆ ನಿಷೇಧ ಎದುರಿಸಬಹುದಾ ಎಂಬ ಅನುಮಾನ ದಟ್ಟವಾಗುತ್ತಿದೆ.



