ಭೀಕರ ಅಪಘಾತ; ಉಡುಪಿಯಲ್ಲಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ
ಕಲಬುರಗಿ: ಕರ್ನಾಟಕದ ಹಿರಿಯ ಆಡಳಿತಾತ್ಮಕ ಅಧಿಕಾರಿ (IAS) ಮತ್ತು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರು ಭೀಕರ ರಸ್ತೆ ಅಪಘಾತದಲ್ಲಿ (Mahantesh Bilagi IAS Passed Away) ನಿಧನರಾಗಿದ್ದಾರೆ. ಈ ದುರಂತದಲ್ಲಿ ಅವರ ಇಬ್ಬರು ಸಹೋದರರು ಸೇರಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.
ಈ ದುರ್ಘಟನೆಯು ಇಂದು (ನವೆಂಬರ್ 25, 2025) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ. ಮಹಾಂತೇಶ್ ಬೀಳಗಿ ಅವರು ತಮ್ಮ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಅಪಘಾತಕ್ಕೆ ಕಾರಣ:
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಐಎಎಸ್ ಅಧಿಕಾರಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು (KA 04, NC 7982) ರಸ್ತೆಗೆ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಇದರಿಂದಾಗಿ ಕಾರು ರಸ್ತೆಯಲ್ಲಿ ಪಲ್ಟಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ.
ಮೂವರು ದುರ್ಮರಣ:
ಘಟನೆಯ ತೀವ್ರತೆಗೆ ಮಹಾಂತೇಶ್ ಅವರ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ತಕ್ಷಣವೇ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ಇದನ್ನೂ ಓದಿ: ಎಲ್ಲೆಡೆ ನಂದಿನಿಯ ಘಮಲು
2012ರ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಈ ಹಿಂದೆ ಬೆಸ್ಕಾಂ (BESCOM) ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ದಾವಣಗೆರೆ, ಉಡುಪಿ ಜಿಲ್ಲೆಗಳಲ್ಲಿಯೂ ಕಾರ್ಯನಿರ್ವಹಿಸಿದ್ದರು. ದಕ್ಷ ಅಧಿಕಾರಿಯ ನಿಧನಕ್ಕೆ ರಾಜ್ಯದಾದ್ಯಂತ ತೀವ್ರ ಶೋಕ ವ್ಯಕ್ತವಾಗಿದೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



