ಶೀಘ್ರದಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಮುಂಚೂಣಿಯಲ್ಲಿರುವ ಹೆಸರು ಇವರದ್ದೇ ನೋಡಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಹಂಗಾಮಿ ನಾಯಕರೇ ಕಳೆದ ಕೆಲ ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಈ ವಿಚಾರವನ್ನು ಇದೀಗ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಈ ಬಾರಿ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಚುನಾವಣೆ ಮೂಲಕ ಆರಿಸುವ ನಿರ್ಧಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜನವರಿ 19ರಂದು ಬಿಜೆಪಿ ಪಾಳಯದಲ್ಲಿ ರಾಷ್ಟ್ರಾಧ್ಯಕ್ಷನ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು 20ರಂದು ಫಲಿತಾಂಶ ಹೊರಬೀಳುವ ಮೂಲಕ ನೂತನ ರಾಷ್ಟ್ರಾಧ್ಯಕ್ಷ ಯಾರು ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಪೂರ್ಣಾವಧಿ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬ ಕುತೂಹಲ ಸದ್ಯ ಎಲ್ಲರಲ್ಲೂ ಮನೆ ಮಾಡಿದೆ. ಮೂಲಗಳ ಪ್ರಕಾರ ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿರುವ ಬಿಹಾರದ ಸಚಿವರಾದ ನಿತಿನ್ ನಬಿನ್ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ನಿತಿನ್ ನಬೀನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದರೆ ಈ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವಯಸ್ಸಿನ ನಾಯಕ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ. ಈ ಹಿಂದೆ ಜೆ.ಪಿ ನಡ್ಡಾ ಕೂಡ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಅಲಂಕರಿಸುವ ಮುನ್ನ ಕಾರ್ಯಾಧ್ಯಕ್ಷ ಸ್ಥಾನದಲ್ಲಿದ್ದರು. ಅದೇ ರೀತಿ ನಬೀನ್ ಕೂಡ ಕಾರ್ಯಾಧ್ಯಕ್ಷ ಹುದ್ದೆಯಲ್ಲುದ್ದಾರೆ. ಆರ್ಎಸ್ಎಸ್ನ ಸಕ್ರಿಯ ಕಾರ್ಯಕರ್ತರಾಗಿರುವ ನಬೀನ್ ಪಕ್ಷ ಸಂಘಟನೆಯ ಚಾಕಚಕ್ಯತೆ ಹೊಂದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಐದು ಬಾರಿ ಶಾಸಕ ಸ್ಥಾನಕ್ಕೆ ಆಯ್ಕೆಯಾಗಿರುವ ನಿತಿನ್ ನಬಿನ್ ಹಲವು ಸಚಿವ ಖಾತೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಕಾರ್ಯಕರ್ತರೊಂದಿಗೆ ಬೆರೆತು ಕೆಲಸ ಮಾಡುವ ನಾಪುಣ್ಯತೆ ಹೊಂದಿರುವ ನಿತಿನ್ ನಬಿನ್ ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಆಗುವುದು ಬಹುತೇಕ ಪಕ್ಕಾ ಎನ್ನಲಾಗಿದೆ.



