ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಕುಂದಾಪುರ: Basruru Appanna Hegde: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಖ್ಯಾತ ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನರಾದರು. 91 ವರ್ಷ ವಯಸ್ಸಾಗಿದ್ದ ಅವರು ವಯೋಸಹಜ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ಕುಂದಾಪುರ ಮಾತ್ರವಲ್ಲದೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಆಳವಾದ ಶೋಕದ ಛಾಯೆ ಆವರಿಸಿದೆ.

ಅಪ್ಪಣ್ಣ ಹೆಗ್ಡೆ ಅವರು 1960 ರಿಂದ 1983ರ ವರೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ಬಳಿಕ 1983ರಿಂದ 1994ರವರೆಗೆ ಕುಂದಾಪುರ(Kundapura) ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಜನಸಂಪರ್ಕ, ಸರಳ ಜೀವನಶೈಲಿ ಹಾಗೂ ಜನಪರ ಕಾರ್ಯಗಳಿಂದ ಅವರು ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದ್ದರು.

ರಾಜಕೀಯದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದ ಅವರು ತಾಲೂಕು ಸಹಕಾರಿ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ, ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರಕ್ಕೂ ಅಪಾರ ಸೇವೆ ನೀಡಿದ್ದರು.

Also Read: ನಿಟ್ಟೆ ವಿಶ್ವವಿದ್ಯಾಲಯದ ದಿಶಾ ಡಿ.ಎನ್. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ

ಅವರ ನಿಧನಕ್ಕೆ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರು ಸಂತಾಪ ಸೂಚಿಸಿದ್ದು, ಇದು ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವೆಂದು ಕಂಬನಿ ಮಿಡಿದಿದ್ದಾರೆ.
ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯ ವಿವರಗಳನ್ನು ಕುಟುಂಬದವರು ತಿಳಿಸುವುದಾಗಿ ತಿಳಿಸಿದ್ದಾರೆ.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories