ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಪೊಲೀಸರ ವಶಕ್ಕೆ
BJP MLA Byrathi Basavaraj arrested | Biklu Shiva murder case:: ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ದೇವನಹಳ್ಳಿ ಪೊಲೀಸರು ಗುರುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶಾಸಕರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಈ ಕ್ರಮ ಜರುಗಿಸಲಾಗಿದೆ. ಬಂಧನದ ಭೀತಿಯಿಂದ ಅಹಮದಾಬಾದ್‌ನಲ್ಲಿ ತಲೆಮರೆಸಿಕೊಂಡಿದ್ದ ಶಾಸಕರು, ಇಂದು ಸಂಜೆ ವಿಮಾನದ ಮೂಲಕ ಬೆಂಗಳೂರಿಗೆ ಹಿಂತಿರುಗುತ್ತಿದ್ದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.
ಕಳೆದ ವರ್ಷ ಜುಲೈ 15ರಂದು ಕಿತ್ತಗನೂರಿನಲ್ಲಿ ನಡೆದಿದ್ದ ಜಮೀನು ವಿವಾದದ ಹಿನ್ನೆಲೆಯಲ್ಲಿ ಮಾಜಿ ರೌಡಿಶೀಟರ್ ವಿ.ಜಿ. ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಮೃತನ ತಾಯಿ ನೀಡಿದ ದೂರಿನ ಮೇರೆಗೆ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಕೊಲೆ ಸಂಚಿನಲ್ಲಿ ಭೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ (A5). ಎ1 ಆರೋಪಿ ಜಗದೀಶ್ ಜೊತೆ ಶಾಸಕರು ನಿಕಟ ಸಂಪರ್ಕ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಅವರ ಮೇಲಿದೆ.
ಶರಾವತಿ ಪಂಪ್ಡ್ ಸ್ಟೋರೇಜ್ಗೆ ಒಪ್ಪಿಗೆ ಇಲ್ಲ : ಜೀವ ವೈವಿಧ್ಯತೆಯ ರಕ್ಷಣೆಯೇ ನಮ್ಮ ಆದ್ಯತೆ ಎಂದ ಕೇಂದ್ರ
ಸದ್ಯ ಪೊಲೀಸರು ಭೈರತಿ ಬಸವರಾಜ್ ಅವರನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇಂದು ರಾತ್ರಿ ಅವರ ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಶುಕ್ರವಾರ ಬೆಳಗ್ಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ಸಿಐಡಿ ಅಧಿಕಾರಿಗಳು ಶಾಸಕರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.



