ಮುಷ್ಕರದ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ವೈದ್ಯರ ಮುಷ್ಕರ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗು ಖಾಸಗಿ ಆಸ್ಪತ್ರೆಯ ವೈದ್ಯರು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ತಿಳಿಸಿದ್ದಾರೆ.
ಉಡುಪಿ: ಆರೋಗ್ಯ ಇಲಾಖೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗು ಖಾಸಗಿ ಆಸ್ಪತ್ರೆಯ ವೈದ್ಯರು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಸರಕಾರದ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಆರೋಗ್ಯ ಇಲಾಖೆಯ ನೌಕರರ ಮುಷ್ಕರದಿಂದ ಜನ ಸಾಮಾನ್ಯರಿಗೆ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಸಾರ್ವಜನಿಕರಿಗೆ ಆರೋಗ್ಯ ಸೇವೆಯನ್ನು ಪಡೆಯಲು ತೊಂದರೆಯಾಗದಂತೆ ಹಾಗೂ ತುರ್ತು ಸೇವೆಗಳನ್ನು ಪಡೆಯಲು ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ಇದನ್ನೂ ಓದಿ: ಕರ್ನಾಟಕದಲ್ಲಿ ಬಿಸಿಲ ಬೇಗೆ : ಬೆಂಗಳೂರಿನಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ಸಭೆಯಲ್ಲಿ ಡಿ. ಹೆಚ್. ಓ ಡಾ. ಬಸವರಾಜ್ ಹುಬ್ಬಳ್ಳಿ, ಕೆ.ಎಂ.ಸಿ ಆಸ್ಪತ್ರೆಯ ಮುಖ್ಯಸ್ಥರು, ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು, ಸರಕಾರಿ ಹಾಗು ಖಾಸಗಿ ವೈದ್ಯಧಿಕಾರಿಗಳು ಮತ್ತು ಮತ್ತಿತರರು ಉಪಸ್ಥಿತರಿದ್ದರು.



