ಕರ್ನಾಟಕ ಮಳೆ ಅಲರ್ಟ್: ಮೈಸೂರು, ಕೊಡಗು ಸೇರಿ 19 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 9ರವರೆಗೆ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಜೊತೆಗೆ ಹಾಸನ, ಚಿಕ್ಕಮಗಳೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.
ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯ ಸಾಧ್ಯತೆ ಇದೆ. ಇನ್ನೊಂದೆಡೆ ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಹ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕಳೆದ 24 ಗಂಟೆಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ 5 ಸೆಂ.ಮೀ ಮತ್ತು ಬೇಗೂರಿನಲ್ಲಿ 4 ಸೆಂ.ಮೀ ಮಳೆಯಾಗಿದೆ. ಮಲೆ ಮಹದೇಶ್ವರ ಬೆಟ್ಟ, ಕೊಡಗಿನ ಹಾರಂಗಿ ಮತ್ತು ಮೈಸೂರಿನ ಎಚ್.ಡಿ. ಕೋಟೆ ಭಾಗಗಳಲ್ಲೂ ಮಳೆಯಾಗಿದೆ ಎಂದು ವರದಿಯಾಗಿದೆ.
ಇನ್ನೊಂದೆಡೆ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕೆಲವು ಭಾಗಗಳಲ್ಲಿ ಮಳೆ ಇದ್ದರೆ, ಇನ್ನೂ ಕೆಲವು ಜಿಲ್ಲೆಗಳು ಬಿಸಿಗಾಳಿಯಿಂದ ಬಳಲುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹವಾಮಾನ ತಜ್ಞರ ಪ್ರಕಾರ, ಮಧ್ಯಪ್ರದೇಶದಿಂದ ಮನ್ನಾರ್ ಕೊಲ್ಲಿವರೆಗೆ ನಿರ್ಮಾಣವಾಗಿರುವ ತೇವಾಂಶ ಭರಿತ ಟ್ರಫ್ ಪರಿಣಾಮ ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಇದೇ ಕಾರಣಕ್ಕೆ ಕೆಲವು ಕಡೆ ಮಳೆ ಮತ್ತು ಕೆಲವು ಭಾಗಗಳಲ್ಲಿ ತೀವ್ರ ಬಿಸಿಲು ಕಾಣಿಸುತ್ತಿದೆ.
ಮುಂದಿನ ಐದು ದಿನಗಳವರೆಗೆ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಆಗುವ ಸಾಧ್ಯತೆ ಇಲ್ಲ ಎಂದು ಇಲಾಖೆ ಹೇಳಿದೆ. ಸದ್ಯ ಸಮುದ್ರದಲ್ಲಿ ಅಪಾಯದ ಸೂಚನೆ ಇಲ್ಲದ ಕಾರಣ ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.



