ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯಾತನಿಂದ ಅತ್ಯಾಚಾರ
ಬೀದರ್ನಲ್ಲಿ ತಂದೆ ಕೆಲಸಕ್ಕೆ ತೆರಳಿದ್ದ ವೇಳೆ ಎಂಟು ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

- ಬಾಲಕಿಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು
- ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
ಬೀದರ್ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ತಾಯಿ ಇಲ್ಲದ ಅಪ್ರಾಪ್ತ ಬಾಲಕಿಯ ಮೇಲೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.
ಮೇ 7ರಂದು ಬಾಲಕಿಯ ತಂದೆ ಕೆಲಸದ ನಿಮಿತ್ತ ಹೊರಗಡೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿಯು ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಕುಟುಂಬಸ್ಥರು ಆಕೆಯನ್ನು ನಗರದ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯಾಗಿರುವ ಧನರಾಜ್ ಕಾಂಬಳೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಮಕ್ಕಳ ರಕ್ಷಣೆಗೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.



