ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ! ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆ ಮಾಡುವಂತೆ ಕೋರಿ ಮಹಿಳೆಯರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ.

ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗುತ್ತಿರುವ ಹಿನ್ನೆಲೆ ಫಲಾನುಭವಿ ಮಹಿಳೆಯರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಎರಡು ತಿಂಗಳಿನಿಂದ ಬಾಕಿಯಾಗಿರುವ ಗೃಹಲಕ್ಷ್ಮಿ ಕಂತುಗಳನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಡಾ. ಕೆ. ಮನ್ಮಥ ರಾವ್ ಹಾಗೂ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ, ಹಣಕಾಸು ಇಲಾಖೆ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.
ಬೆಂಗಳೂರು ನಿವಾಸಿಗಳಾದ ಆರ್. ಗಂಗಾ ಮತ್ತು ಜಿ.ಡಿ. ಪವಿತ್ರಾ ಎಂಬವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗದೆ ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
2024ರ ಏಪ್ರಿಲ್‌ನಿಂದ 2025ರ ಜನವರಿವರೆಗೆ ಯಾವುದೇ ಅಡಚಣೆ ಇಲ್ಲದೆ ಗೃಹಲಕ್ಷ್ಮಿ ಯೋಜನೆಯ ಹಣ ವಿತರಣೆ ನಡೆಯುತ್ತಿತ್ತು. ಆದರೆ ಬಳಿಕ ಯೋಜನೆ ನಿರ್ವಹಣೆಯಲ್ಲಿ ಸರ್ಕಾರ ಕೆಲವು ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿದ್ದ ಜವಾಬ್ದಾರಿಯನ್ನು ತಾಲೂಕು ಪಂಚಾಯಿತಿಗಳಿಗೆ ವರ್ಗಾಯಿಸಿದ ನಂತರ ತಾಂತ್ರಿಕ ಗೊಂದಲ ಉಂಟಾಗಿದೆ ಎನ್ನಲಾಗಿದೆ.
ಈ ಬದಲಾವಣೆಯ ಪರಿಣಾಮವಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳು ಹಲವು ಮಹಿಳೆಯರ ಖಾತೆಗೆ ಜಮೆಯಾಗದೇ ಬಾಕಿಯಾಗಿದೆ. ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದ್ದು, ಸರ್ಕಾರದ ಪ್ರತಿಕ್ರಿಯೆ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ. ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಲ್ಲಿ ಇದೀಗ ಹೈಕೋರ್ಟ್ ಕ್ರಮ ಹೊಸ ನಿರೀಕ್ಷೆ ಮೂಡಿಸಿದೆ.



