ರಾಜ್ಯದಲ್ಲಿ ಇಂದಿನಿಂದ 5 ದಿನ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ

ಮುಂದಿನ 5 ದಿನಗಳ ಕಾಲ ರಾಜ್ಯದ 19 ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ತಾಪಮಾನ ಕುಸಿತದ ಬೆನ್ನಲ್ಲೇ, ಮುಂದಿನ 5 ದಿನಗಳ ಕಾಲ ರಾಜ್ಯದ 19 ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ಗದಗದಲ್ಲಿ 50-60 ಕಿ.ಮೀ., ಉತ್ತರ ಒಳನಾಡು, ಬಯಲು ಸೀಮೆಯಲ್ಲಿ 40-50 ಕಿ.ಮೀ., ಮತ್ತು ದಕ್ಷಿಣ ಒಳನಾಡಿನಲ್ಲಿ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ಇನ್ನು ಕರಾವಳಿಯ ಕೆಲವೆಡೆ ಮಳೆ, ಉಳಿದಂತೆ ಒಣ ಹವಾಮಾನ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿಯ ವೇಗವು ಸ್ವಲ್ಪ ಕಡಿಮೆ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಸದ್ಯ ರಾಜ್ಯದಾದ್ಯಂತ ಗರಿಷ್ಠ ಉಷ್ಣಾಂಶವು 28.3 ಡಿಗ್ರಿ ಸೆಲ್ಸಿಯಸ್‌ನಿಂದ 40.4 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದೆ. ಆದರೆ, ಉತ್ತರ ಒಳನಾಡಿನ ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ ತೀವ್ರವಾಗಿ ಇಳಿಕೆಯಾಗಿದೆ.

ಇದರೊಂದಿಗೆ ಗದಗ, ಕಲಬುರಗಿ, ಕೊಪ್ಪಳ, ಶಿವಮೊಗ್ಗ, ಬೀದರ್ ಹಾಗೂ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೆಚ್.ಎ.ಎಲ್ ಪ್ರದೇಶಗಳಲ್ಲೂ ಉಷ್ಣಾಂಶದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ ಹಾಗೂ ಮಂಡ್ಯ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಕಡಿಮೆ ತಾಪಮಾನ ದಾಖಲಾಗಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories