
ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 29ರಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಅನೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ನಿವಾಸಿಗಳು ಹಾಗೂ ಸಮುದ್ರಕ್ಕೆ ತೆರಳುವ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರ ನಂತರ ಯೆಲ್ಲೋ ಅಲರ್ಟ್ ಜಾರಿಯಾಗಲಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೆಲವೆಡೆ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಜೂನ್ 29ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಹವಾಮಾನ ಮಾಹಿತಿ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಗಮನಿಸಿ ಸುರಕ್ಷಿತವಾಗಿರಲು ಅಧಿಕಾರಿಗಳು ಮನವಿ ಮಾಡಿದ್ದಾರೆ.



