
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ತಲುಪಬೇಕಿದ್ದ ಗೋಧಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 14 ಟನ್ ಗೋಧಿಯನ್ನು ವಶಪಡಿಸಿಕೊಳ್ಳಲಾಗಿದೆ.
ಚಿಂತಾಮಣಿಯ ಹೆಚ್ ಕ್ರಾಸ್ ಸಮೀಪ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕ್ಯಾಂಟರ್ ವಾಹನವನ್ನು ತಡೆದು ಪರಿಶೀಲಿಸಿದ ವೇಳೆ ಸುಮಾರು 250 ಚೀಲ ಗೋಧಿ ಪತ್ತೆಯಾಗಿದೆ. ಈ ಗೋಧಿಯನ್ನು ಚಿಂತಾಮಣಿಯಿಂದ ಹೊಸಕೋಟೆ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಜಪ್ತಿಯಾದ ಗೋಧಿಯು ಜಿಲ್ಲೆಯ ಸರ್ಕಾರಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಬಳಕೆಗೆ ಮೀಸಲಾಗಿದ್ದ ದಾಸ್ತಾನು ಎನ್ನುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳ ಆಹಾರಕ್ಕಾಗಿ ಸರ್ಕಾರ ಒದಗಿಸಿದ್ದ ಪಡಿತರವನ್ನು ಅಕ್ರಮ ಮಾರ್ಗದಲ್ಲಿ ಮಾರಾಟ ಮಾಡಲು ಯತ್ನಿಸಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಈ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿ, ಸಕ್ಕರೆ ಸೇರಿದಂತೆ ವಿವಿಧ ಆಹಾರ ಧಾನ್ಯಗಳನ್ನು ಕಾಳದಂಧೆಯಲ್ಲಿ ಮಾರಾಟ ಮಾಡಿದ ಪ್ರಕರಣಗಳು ಹಲವು ಬಾರಿ ಬೆಳಕಿಗೆ ಬಂದಿದ್ದವು. ಇದೀಗ ಗೋಧಿ ಅಕ್ರಮ ಸಾಗಾಟವೂ ಪತ್ತೆಯಾಗಿರುವುದು ಆಹಾರ ಧಾನ್ಯಗಳ ದುರುಪಯೋಗದ ಬಗ್ಗೆ ಮತ್ತೆ ಆತಂಕ ಮೂಡಿಸಿದೆ.
ಪ್ರಕರಣ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಗೋಧಿ ಯಾರಿಂದ ಸಾಗಿಸಲಾಗುತ್ತಿತ್ತು, ಇದರ ಹಿಂದೆ ಯಾರು ಇದ್ದಾರೆ ಹಾಗೂ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಅಕ್ರಮ ಜಾಲದ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಮುಂದಾಗಿದ್ದಾರೆ.



