2008ರ ಅಹಮದಾಬಾದ್ ಸರಣಿ ಸ್ಫೋಟ: 38 ಅಪರಾಧಿಗಳ ಗಲ್ಲು ಶಿಕ್ಷೆ ಖಾಯಂ ಮಾಡಿದ ಹೈಕೋರ್ಟ್!
ಗುಜರಾತ್ ಹೈಕೋರ್ಟ್ ಮಂಗಳವಾರ (ಜುಲೈ 7) ಅತ್ಯಂತ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 38 ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ (ಗಲ್ಲು ಶಿಕ್ಷೆ) ಹಾಗೂ 11 ಅಪರಾಧಿಗಳಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಅಹಮದಾಬಾದ್: ದೇಶವನ್ನೇ ನಡುಗಿಸಿದ್ದ 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಂಗಳವಾರ (ಜುಲೈ 7) ಅತ್ಯಂತ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 38 ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ (ಗಲ್ಲು ಶಿಕ್ಷೆ) ಹಾಗೂ 11 ಅಪರಾಧಿಗಳಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ವಿಶೇಷ ನ್ಯಾಯಾಲಯ ನೀಡಿದ್ದ ಈ ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಅಪರಾಧಿಗಳು ಗುಜರಾತ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ವೈ. ಕೊಗ್ಜೆ ಹಾಗೂ ಸಮೀರ್ ಡೇವ್ ಅವರಿದ್ದ ವಿಭಾಗೀಯ ಪೀಠವು, ಅಪರಾಧಿಗಳ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ ಕೆಳ ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಎತ್ತಿಹಿಡಿದಿದೆ.

ಏನಿದು ಪ್ರಕರಣ?
ಜುಲೈ 26, 2008 ರಂದು ಗುಜರಾತ್‌ನ ಅಹಮದಾಬಾದ್ ನಗರದ ವಿವಿಧೆಡೆ ಕೇವಲ 70 ನಿಮಿಷಗಳ ಅವಧಿಯಲ್ಲಿ ಬರೋಬ್ಬರಿ 21 ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಇಂಡಿಯನ್ ಮುಜಾಹಿದ್ದೀನ್ (IM) ಉಗ್ರ ಸಂಘಟನೆ ನಡೆಸಿದ್ದ ಈ ಭೀಕರ ಕೃತ್ಯದಲ್ಲಿ 56 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು ಮತ್ತು 200 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು 2022ರಲ್ಲಿ 49 ಜನರನ್ನು ಅಪರಾಧಿಗಳು ಎಂದು ಘೋಷಿಸಿ, ಅದರಲ್ಲಿ 38 ಮಂದಿಗೆ ಮರಣದಂಡನೆ ವಿಧಿಸಿ ಇತಿಹಾಸ ನಿರ್ಮಿಸಿತ್ತು. ಇದೀಗ ಹೈಕೋರ್ಟ್ ಕೂಡ ಆ ತೀರ್ಪಿಗೆ ಸೈ ಎಂದಿದೆ.

