ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026ಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಜುಲೈ 13 ಕೊನೆಯ ದಿನಾಂಕ
ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರು, ಮುಖ್ಯಶಿಕ್ಷಕರು ಹಾಗೂ ಪ್ರಾಂಶುಪಾಲರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026ಕ್ಕೆ ಜುಲೈ 13ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ರಾಷ್ಟ್ರಮಟ್ಟದಲ್ಲಿ ಗೌರವಿಸುವ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026ಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರು ಈ ಪ್ರತಿಷ್ಠಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10 ವರ್ಷಗಳ ನಿಯಮಿತ ಸೇವೆ ಪೂರ್ಣಗೊಳಿಸಿರಬೇಕು. ಆದರೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡುವ ಮೊದಲು ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಅಗತ್ಯವಾಗಿದೆ.
ಅರ್ಜಿ ಸಲ್ಲಿಸಲು 2026ರ ಜುಲೈ 13 ಕೊನೆಯ ದಿನವಾಗಿದೆ. ಕೊನೆಯ ದಿನದವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಸಲಹೆ ನೀಡಿದೆ.
ಆಯ್ಕೆ ಪ್ರಕ್ರಿಯೆ ಹಲವು ಹಂತಗಳಲ್ಲಿ ನಡೆಯಲಿದೆ. ಮೊದಲು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಮಿತಿಗಳು ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಶಿಫಾರಸು ಮಾಡಲಿವೆ. ಬಳಿಕ ರಾಷ್ಟ್ರೀಯ ತೀರ್ಪುಗಾರರ ಸಮಿತಿ ಅಂತಿಮ ಮೌಲ್ಯಮಾಪನ ನಡೆಸಿ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರನ್ನು ಘೋಷಿಸಲಿದೆ.
ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಶಿಕ್ಷಕರಿಗೆ ತಮ್ಮ ಸೇವೆಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಸಿಕೊಳ್ಳುವ ಅಪರೂಪದ ಅವಕಾಶ ಇದಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

