ಸರ್ಕಾರಿ ಬಸ್​ಗಳಲ್ಲಿ ಇನ್ಮುಂದೆ ಉಗುಳಿದ್ರೆ ಹುಷಾರ್​: ಗುಟ್ಕಾ, ಧೂಮಪಾನ ಮಾಡಿದ್ರೆ ಬೀಳುತ್ತೆ ಭಾರೀ ದಂಡ!

ರಾಜ್ಯದ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ಲಕ್ಷಾಂತರ ಪ್ರಯಾಣಿಕರ ಆರೋಗ್ಯ ರಕ್ಷಣೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿರುವ ರಾಜ್ಯ ಸಾರಿಗೆ ಇಲಾಖೆಯು, ಇನ್ಮುಂದೆ ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

ರಾಜ್ಯದ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ಲಕ್ಷಾಂತರ ಪ್ರಯಾಣಿಕರ ಆರೋಗ್ಯ ರಕ್ಷಣೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿರುವ ರಾಜ್ಯ ಸಾರಿಗೆ ಇಲಾಖೆಯು, ಇನ್ಮುಂದೆ ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಈ ಕುರಿತು ಸಾರಿಗೆ ಸಚಿವರು ಇಲಾಖೆಯ ಉನ್ನತಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಸಾರ್ವಜನಿಕ ಬಸ್‌ಗಳಲ್ಲಿ ಕೆಲವರು ಜಗಿಯುವ ಗುಟ್ಕಾ ಮತ್ತು ಧೂಮಪಾನದ ಅಸಹನೀಯ ವಾಸನೆಯಿಂದಾಗಿ ಸಹ ಪ್ರಯಾಣಿಕರು ತೀವ್ರ ಅಸ್ವಸ್ಥತೆ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಮಕ್ಕಳು, ವೃದ್ಧರು ಹಾಗೂ ಅಸ್ತಮಾದಂತಹ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಇದರಿಂದ ಭಾರೀ ತೊಂದರೆಯಾಗುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡು, ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ಸಾರಿಗೆ ಇಲಾಖೆಗೆ ವಿಶೇಷ ಮನವಿ ಸಲ್ಲಿಸಿದ್ದರು. ಈ ಮನವಿಗೆ ತಕ್ಷಣ ಸ್ಪಂದಿಸಿರುವ ಸಾರಿಗೆ ಸಚಿವರು, ಸಚಿವರ ಆಪ್ತ ಕಾರ್ಯದರ್ಶಿ ಡಾ. ದೇವರಾಜ ಬಿ. ಅವರ ಮೂಲಕ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಕ್ಷಣವೇ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆದೇಶಿಸಿದ್ದಾರೆ.

ಈ ಹೊಸ ನಿರ್ದೇಶನದನ್ವಯ ಕೆಎಸ್‌ಆರ್‌ಟಿಸಿ , ಬಿಎಂಟಿಸಿ , ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ತಂಬಾಕು ನಿಷೇಧ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ (COTPA – 2003) ಅಡಿಯಲ್ಲಿ ಸಾರ್ವಜನಿಕ ಸ್ಥಳ ಹಾಗೂ ಸಾರಿಗೆಯಲ್ಲಿ ಧೂಮಪಾನ ಮಾಡುವುದು ಈಗಾಗಲೇ ಶಿಕ್ಷಾರ್ಹ ಅಪರಾಧವಾಗಿದ್ದು, ಇನ್ಮುಂದೆ ಬಸ್‌ಗಳಲ್ಲಿ ನಿಯಮ ಉಲ್ಲಂಘಿಸುವವರಿಗೆ ಸ್ಥಳದಲ್ಲೇ ದಂಡ ವಿಧಿಸುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.

ಮಾತ್ರವಲ್ಲದೆ, ಗುಟ್ಕಾ ತಿಂದು ಬಸ್‌ಗಳ ಒಳಗೆ ಮತ್ತು ಕಿಟಕಿಗಳಿಂದ ಹೊರಗೆ ಉಗುಳುವುದರಿಂದ ಸಾರ್ವಜನಿಕ ವಾಹನಗಳು ಕೊಳಕಾಗುತ್ತಿದ್ದು, ಇಲಾಖೆಯು ಬಸ್‌ಗಳ ಸೌಂದರ್ಯ ಮತ್ತು ಸ್ವಚ್ಛತೆಯನ್ನು ಕಾಪಾಡಲು ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ತಳೆದಿರುವ ಈ ಕಠಿಣ ನಿಲುವಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಬೆಂಬಲ ಮತ್ತು ಶ್ಲಾಘನೆ ವ್ಯಕ್ತವಾಗುತ್ತಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.