ಕರಾವಳಿ ಜನರೇ ಎಚ್ಚರ, ಇನ್ನೂ ಮೂರು ದಿನ ಬಿರುಗಾಳಿ ಸಹಿತ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಕಠಿಣ ಎಚ್ಚರಿಕೆ!

ಕರಾವಳಿ ತೀರದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ತೀರದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕರಾವಳಿ ತೀರ ಪ್ರದೇಶಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರವಾಗಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯಬಾರದು ಎಂದು ಜಿಲ್ಲಾಡಳಿತಗಳು ಎಚ್ಚರಿಸಿವೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಳ್ಳುವ ಭೀತಿಯಿರುವುದರಿಂದ ಸ್ಥಳೀಯ ಅಧಿಕಾರಿಗಳು ಈಗಾಗಲೇ ಜಾಗೃತರಾಗಿದ್ದಾರೆ. ಮತ್ತೊಂದೆಡೆ, ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜುಲೈ 12ರವರೆಗೆ ರಾಜಾ ಸೀಟ್ ವೀಕ್ಷಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ರಾಮನಗರ ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.

ಉತ್ತರ ಕರ್ನಾಟಕದ ಭಾಗಗಳಾದ ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯಲ್ಲೂ ಸಾಧಾರಣ ಮಳೆಯ ಮುನ್ಸೂಚನೆಯಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಬಹುದು. ಹವಾಮಾನದ ಏರುಪೇರುಗಳನ್ನು ಗಮನಿಸಿ ಸಾರ್ವಜನಿಕರು ಸುರಕ್ಷಿತವಾಗಿರಲು ಕೋರಲಾಗಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.