ಮಂಗಳೂರು : ರಾಜ್ಯ ಸರಕಾರದ ವಿದ್ಯಾಗಮ ಯೋಜನೆ ಶಿಕ್ಷಕರ ಪಾಲಿಗೆ ಸಾವಿನ ಕೂಪವಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಕ ದಂಪತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಂದೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ರೆ, ತಂದೆ ಸೋಂಕಿನಿಂದ ಬಳಲುತ್ತಿದ್ದಾರೆ. ಇದೀಗ ಪುತ್ರಿ ಸಂಕಷ್ಟಕ್ಕೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ನೆಹರೂ ಮಕ್ಕಿ ಅನುದಾನಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಪದ್ಮಾಕ್ಷಿ ಎನ್. ಅವರು ವಿದ್ಯಾಗಮ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ಆರೋಗ್ಯವಾಗಿದ್ದ ಶಿಕ್ಷಕಿಗೆ ವಿದ್ಯಾಗಮ ಯೋಜನೆಯಿಂದಲೇ ಕೊರೊನಾ ಸೋಂಕು ತಗುಲಿತ್ತು. ಕಳೆದ 15 ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇನ್ನೊಂದೆಡೆ ಶಿಕ್ಷಕರಾಗಿದ್ದ ತಂದೆಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ತಂದೆ ತಾಯಿಯ ಆರೈಕೆ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಪುತ್ರಿ ಐಶ್ವರ್ಯ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ನಳೀನ್ ಕುಮಾರ್ ಕಟೀಲು, ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವ ಡಾ.ಸುಧಾಕರ್, ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ಕೊರೊನಾ ಸಂಕಷ್ಟದ ಕಾಲದಲ್ಲಿ ವಿದ್ಯಾಭ್ಯಾಸವನ್ನು ಒದಗಿಸುವ ನಿಟ್ಟಿನಲ್ಲಿ ಜಾರಿಗೆ ತಂದಿದ್ದ ವಿದ್ಯಾಗಮ ಯೋಜನೆಯಿಂದಲೇ ಸೋಂಕು ಹರಡುತ್ತಿದೆ. ವೃತ್ತಿ ನಿಷ್ಠೆಯಿಂದಲೇ ಶಿಕ್ಷಕ ದಂಪತಿಗಳ ಕುಟುಂಬ ಇದೀಗ ಸಂಕಷ್ಟಕ್ಕೆ ಸಿಲುಕಿದೆ.