
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಉಪನ್ಯಾಸಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನೆನಗುದಿಗೆ ಬಿದ್ದಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರ ವರ್ಗಾವರಣೆ ಪ್ರಕ್ರೀಯೆಯನ್ನು ಒಂದು ವಾರದ ಒಳಗೆ ಆರಂಭಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಆದೇಶಿಸಿದ್ದಾರೆ.

ಇತರ ಇಲಾಖೆಗಳಲ್ಲಿನ ವರ್ಗಾವಣೆಯನ್ನು ಕಾಲ ಕಾಲಕ್ಕೆ ನಡೆಸಲಾಗುತ್ತಿದೆ. ಆದರೆ ಶಿಕ್ಷಣ ಇಲಾಖೆಯ ನೌಕರರಿಗೆ ಮಾತ್ರವೇ ತಾರತಮ್ಯವನ್ನು ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ಶಿಕ್ಷಕರು ಹಾಗೂ ಉಪನ್ಯಾಸಕರು ಒತ್ತಡ ಹೇರಿದ ಬೆನ್ನಲ್ಲೇ ಕಳೆದ 5 ತಿಂಗಳ ಹಿಂದೆಯೇ ರಾಜ್ಯ ಸರಕಾರ ವರ್ಗಾವಣೆ ಮಾರ್ಗಸೂಚಿಯನ್ನು ಹೊರಡಿಸಿತ್ತು. ಆದರೆ ವರ್ಗಾವಣೆ ವೇಳಾಪಟ್ಟಿ ಆದೇಶವನ್ನು ಹೊರಡಿಸಿರಲಿಲ್ಲ. ಇದರಿಂದಾಗಿ ಶಿಕ್ಷಕರು ಮತ್ತು ಉಪನ್ಯಾಸಕರು ಆತಂಕಕ್ಕೆ ಒಳಗಾಗಿದ್ದರು.

ಇದೀಗ ರಾಜ್ಯ ಸರಕಾರಿ ನೌಕರರ ಸಂಘ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸುವಂತೆ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲೀಗ ಮುಂದಿನ ಒಂದು ವಾರದ ಒಳಗಾಗಿ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ.
