ಬೆಂಗಳೂರು : ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎಪ್ರಿಲ್ 28 ರಿಂದ ನಿಗದಿಯಾಗಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸುರೇಶ್ ಕುಮಾರ್, ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮುಕ್ತಾಯವಾದ ಬೆನ್ನಲ್ಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿದ್ದಾರೆ.

ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳ ಜೊತೆಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.

ಎಪ್ರೀಲ್ 28 ರಿಂದ ಪ್ರಾಯೋಗಿಕ ಪರೀಕ್ಷೆಗಳು ನಡೆಸಲು ಮುಂದಾಗಿ ದ್ದ ಪದವಿ ಪೂರ್ವ ಪರೀಕ್ಷಾ ಮಂಡಳಿಯ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

