ಮಂಗಳೂರು : ಕರಾವಳಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯನ್ನಾಗಿ ಘೋಷಿಸಲಾಗಿದೆ. ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಒಟ್ಟು 5 ಕೊರೊನಾ ರೋಗಿಗಳು ಪತ್ತೆಯಾಗಿದ್ದಾರೆ. ಈ ಪೈಕಿ 4 ಮಂದಿ ಕಾಸರಗೋಡು ಜಿಲ್ಲೆಯವರಾಗಿದ್ದು, ಓರ್ವ ಕೊರೊನಾ ಪೀಡಿತ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಿವಾಸಿಯಾಗಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿಲ್ಲ.

ಒಟ್ಟು 140 ಮಂದಿ ಕೊರೊನಾ ಶಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 17 ಮಂದಿಯ ವೈದ್ಯಕೀಯ ತಪಾಸಣಾ ವರದಿ ಇನ್ನಷ್ಟೇ ಕೈ ಸೇರಬೇಕಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ಐಸೋಲೇಶನ್ ವಾರ್ಡ್ ಹೆಚ್ಚಿಸುವ ಕುರಿತು ಕ್ರಮಕೈಗೊಳ್ಳಲಾಗುತ್ತದೆ ಎಂದು ಸಚಿವ ಪೂಜಾರಿ ತಿಳಿಸಿದ್ದಾರೆ.