ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಈಗಾಗಲೇ ವಿಚಾರಣೆಯನ್ನು ಪೂರ್ಣಗೊಳಿಸಲಿರುವ ನ್ಯಾಯಾಲಯ 28 ವರ್ಷಗಳ ನಂತರ ತೀರ್ಪು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲೀಗ ಬಿಜೆಪಿ ನಾಯಕರಿಗೆ ಅಗ್ನಿ ಪರೀಕ್ಷೆ ಎದುರಾಗಿದೆ.

1992 ಡಿಸೆಂಬರ್ 6 ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು. ಸೆಕ್ಷನ್ 153 ಎ(ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು),ಸೆಕ್ಷನ್ 153 ಬಿ(ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ), ಸೆಕ್ಷನ್ 505 ( ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್ ಸೇರಿದಂತೆ ಒಟ್ಟು 32 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

2017ರ ಏಪ್ರಿಲ್ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರ ಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯ ದಲ್ಲಿ ವಿಚಾರಣೆ ನಡೆಯುತ್ತಿತ್ತು.

2017ರ ಏಪ್ರಿಲ್‌ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು. ಅಂತಿಮ ವಿಚಾರಣೆಯನ್ನು ನಡೆಸಿರುವ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸುತ್ತಿದೆ. ಅಲ್ಲದೇ ಎಲ್ಲಾ ಆರೋಪಿಗಳು ತೀರ್ಪು ನೀಡುವ ದಿನದಂದು ಖುದ್ದು ಹಾಜರಿರುವಂತೆ ನ್ಯಾ.ಸುರೇಂದ್ರ ಕುಮಾರ್ ಯಾದವ್ ಸೂಚಿಸಿದ್ದಾರೆ.