ಚಿತ್ರದುರ್ಗ : ಚಲಿಸುತ್ತಿದ್ದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ 5 ಮಂದಿ ಸಜೀವ ದಹನವಾದ ಘಟನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐದು ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿದೆ.

ಎ 51- ಎಡಿ 7449 ಕುಕ್ಕೆ ಶ್ರೀ ಟ್ರಾವಲ್ಸ್ ಎಂಬ ಖಾಸಗಿ ಬಸ್ ಬಿಜಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವಾಗ ಈ ಘಟನೆ ಸಂಭವಿಸಿದ್ದು, 35ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಹಲವರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದರೂ ಕೂಡ ಬೆಂಕಿ ನಂದಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್ಸಿನಲ್ಲಿದ್ದವರು ಹೊರಗೆ ಓಡಿ ಬಂದಿದ್ದರಿಂದಾಗಿ 30ಕ್ಕೂ ಅಧಿಕ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯಪುರದಿಂದ ಹೊರಟ ಬಸ್ ನ್ನು ಚಾಲಕ ಎಲ್ಲಿಯೂ ನಿಲ್ಲಿಸದೆ ಚಲಾಯಿಸಿದ್ದಾನೆ. ಹೀಗಾಗಿ ಇಂಜಿನ್ ಓವರ್ ಬಿಸಿಯಾಗಿ ಘಟನೆ ಸಂಭವಿಸಿರಬಹುದು ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.