ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಗಸ್ಟ್ 11ರ ವರೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರವನ್ನು ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅಗಸ್ಟ್ ಆರಂಭದಿಂದಲೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಅಗಸ್ಟ್ 4ರಂದು ಮೂಡಿಗೆರೆ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತವಾಗಿದ್ದು, ಭಾರೀ ಪ್ರಮಾಣದ ಮರಗಳು ಹೆದ್ದಾರಿಗೆ ಉರುಳಿಬಿದ್ದಿವೆ. ಹೆದ್ದಾರಿಯಲ್ಲಿ ಭೂ ಕುಸಿತವಾಗಿರುವ ಜಾಗದಲ್ಲಿಯೇ ಪದೇ ಪದೇ ಭೂ ಕುಸಿತ ಉಂಟಾಗುತ್ತಿದೆ. ಹೀಗಾಗಿ ಮಣ್ಣನ್ನು ತೆರವುಗೊಳಿಸಲು ಸಾಧ್ಯವಾಗುತ್ತಿಲ್ಲ.’

ಮುಂದಿನ ಕೆಲ ದಿನಗಳವರೆಗೆ ಮಳೆಯ ಪ್ರಮಾಣದಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಅಲ್ಲದೇ ಘಾಟಿ ವ್ಯಾಪ್ತಿಯಲ್ಲಿ ಗಾಳಿಯ ಜೊತೆಗೆ ಮಳೆ ಸುರಿಯುತ್ತಿದೆ. ಜೊತೆಗೆ ವಾಹನ ದಟ್ಟಣೆಯು ಹೆಚ್ಚುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಾಹನ ಸವಾರರು ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವಂತೆಯೂ ಸೂಚಿಸಿದ್ದಾರೆ.
