ಬೆಂಗಳೂರು: ಪೀರನವಾಡಿಯಲ್ಲಿನ ಪ್ರತಿಮೆ ಗಲಾಟೆ ಪ್ರಕರಣದಲ್ಲಿ ಮರಾಠಿಗರು, ಕನ್ನಡಿಗರು ಅಂತ ಯಾವುದೇ ಬೇಧಭಾವಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಸಂಬಂದ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಈಗಾಗಲೇ ಚರ್ಚಿಸಿ ಅಗತ್ಯ,ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಸೂಕ್ಷ್ಮವಾಗಿ, ಶಾಂತ ರೀತಿಯಲ್ಲಿ ಸಮಸ್ಯೆ ಬಗೆಹರಿಸುತ್ತೇವೆ. ಈಗ ಪರಿಸ್ಥಿತಿ ಶಾಂತವಾಗಿದೆ, ಎಲ್ಲಾರೂ ಸಹಕಾರ ಕೊಡ್ತಿದ್ದಾರೆ ಎಂದು ಅವರು ಹೇಳಿದರು.

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿರೋಧಿಸಿ ನಡೆದ ಗಲಾಟೆ ಹಾಗೂ ಲಾಠಿ ಚಾರ್ಜ್ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ ಎಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಶಿಕ್ಷಣ ಇಲಾಖೆ ಸಭೆಯ ಬಳಿಕ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ್ ಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎರಡು ಕಡೆಯ ಸಮುದಾಯ ದ ಮುಖಂಡರ ಜೊತೆ ಸಭೆ ನಡೆಸಿ ಸಂಧಾನ ನಡೆಸುವಂತೆ ಸೂಚಿಸಿದರು. ಪ್ರತಿಮೆ ಸ್ಥಾಪಿಸಲಾಗಿರುವ ಪ್ರದೇಶದಲ್ಲಿ ಹೆಚ್ಚಿನ ಪೋಲಿಸ್ ಪಡೆ ನಿಯೋಜಿಸುವುದು ಹಾಗೂ ಇತರೆ ಮುನ್ನಚ್ಚರಿಕೆ ಕ್ರಮಗಳನ್ನ ಕೈಗೊಳ್ಳುವಂತೆಯೂ ಇದೇ ವೇಳೆ ಅವರು ನಿರ್ದೇಶನ ನೀಡಿದ್ದಾರೆ.

ಅಲ್ಲದೆ ತಕ್ಷಣ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.