ಬಂದ್ ಆಗುತ್ತಾ ಅಂತರ್ ಜಿಲ್ಲಾ ವಾಹನ ಸಂಚಾರ ? ಕೊರೊನಾ ತಡೆಗೆ ತಜ್ಞವೈದ್ಯರಿಂದ ಸಿಎಂಗೆ 7 ಸೂತ್ರ

0

ಬೆಂಗಳೂರು : ಕೊರೊನಾ ಹೆಮ್ಮಾರಿ ಆರ್ಭಟ ಹೆಚ್ಚುತ್ತಿದೆ. ಇನ್ನೊಂದೆಡೆ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಅನ್ನುವ ಆತಂಕವಿದ್ದು, ರಾಜ್ಯ ಸರಕಾರ ಕೊರೊನಾ ತಡೆಗೆ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಈ ನಡುವಲ್ಲೇ ಸಿಎಂ ಯಡಿಯೂರಪ್ಪ ಅವರಿಗೆ ತಜ್ಞ ವೈದ್ಯರು ಕೊರೊನಾ ತಡೆಗೆ 7 ಸೂತ್ರಗಳನ್ನು ನೀಡಿದ್ದಾರೆ.

ಕಳೆದೊಂದು ತಿಂಗಳಿನಿಂದಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಬೆಂಗಳೂರು ನಗರವೊಂದರಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆ 2,000ದ ಗಡಿಯಂಚಿನಲ್ಲಿದೆ. ಅಲ್ಲದೇ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರೋದು ಆತಂಕವನ್ನು ಮೂಡಿಸಿದೆ. ಈ ನಡುವಲ್ಲೇ ರಾಜ್ಯ ಸರಕಾರ ಸರ್ವಪಕ್ಷ ಶಾಸಕರು, ಅಧಿಕಾರಿಗಳ ಸಭೆಯನ್ನು ನಡೆಸುತ್ತಿದ್ದು, ಕೊರೊನಾ ತಡೆಗೆ ಮಾರ್ಗಗಳನ್ನು ಹುಡುಕುವ ಕಾರ್ಯವನ್ನು ಮಾಡುತ್ತಿದೆ. ಬೆಂಗಳೂರಿನ ಹಲವೆಡೆಗಳಲ್ಲಿ ಕಟ್ಟುನಿಟ್ಟಿನ ಸೀಲ್ ಡೌನ್ ಆದೇಶವನ್ನು ಜಾರಿ ಮಾಡಲಾಗುತ್ತಿದೆ. ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ತಜ್ಞ ವೈದ್ಯರುಗಳಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ಡಾ.ಗಿರೀಶ್, ಡಾ.ಸುದರ್ಶನ್ ಹಾಗೂ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಜ್ಞ ವೈದ್ಯರು 7 ಸಲಹೆಗಳನ್ನು ರಾಜ್ಯ ಸರಕಾರಕ್ಕೆ ನೀಡಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಲಸೆ ಹೋಗುವವರು, ಬೆಂಗಳೂರಿಗೆ ಹೊರಗಿನಿಂದ ಬರುವವರ ಸಂಖ್ಯೆಯೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಅಂತರ್ ಜಿಲ್ಲಾ ವಾಹನ ಓಡಾಟವನ್ನು ಕನಿಷ್ಠ 3 ವಾರಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡುವಂತೆ ಸಲಹೆಯನ್ನು ನೀಡಿದ್ದಾರೆ. ಹೀಗೆ ಮಾಡುವುದರಿಂದ ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಕೊರೊನಾ ಹರಡುವುದು ಹಾಗೂ ಬೆಂಗಳೂರಿನಿಂದ ಹಳ್ಳಿಗಳಿಗೆ ಕೊರೊನಾ ಹರಡುವುದನ್ನು ತಪ್ಪಿಸಲು ಸಹಕಾರಿಯಾಗಲಿದೆ ಎಂಬ ಸಲಹೆಯನ್ನು ತಜ್ಞರು ನೀಡಿದ್ದಾರೆ.

ಇನ್ನು ಎರಡು ವಾರಗಳ ಕಾಲ ಪರಿಸ್ಥಿತಿಯನ್ನು ಮಾನಿಟರ್ ಮಾಡಬೇಕು, ದಿನಕ್ಕೆ ಸಾವಿರ ಕೊರೊನಾ ಪ್ರಕರಣಗಳು ದಾಖಲಾಗುವ ಸ್ಥಿತಿ ಬಂದಾಗ ಲಾಕ್ ಡೌನ್ ಮಾಡುವ ನಿರ್ಧಾರವನ್ನು ಕೈಗೊಳ್ಳಬಹುದು. ಅಲ್ಲದೇ ಬೆಂಗಳೂರಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡುತ್ತಿದ್ದು, ಇದನ್ನು ತಡೆಯಲೇ ಬೇಕಾದ ಅನಿವಾರ್ಯತೆಯಿದೆ. ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಚಿಕಿತ್ಸೆಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮನೆಗಳು ದೊಡ್ಡದಾಗಿದ್ದರೆ, ಮನೆಯಲ್ಲಿಯೇ ಕೊರೊನಾ ರೋಗಿಗಳಿಗೆ ಚಿಕಿತ್ಸೆಯನ್ನು ನೀಡುವ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಬಹುದು ಅನ್ನುವ ಸಲಹೆಯನ್ನು ನೀಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿಗೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಪ್ರತಿನಿತ್ಯವೂ ನಡೆಸಲಾಗುವ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಬೇಕಾಗಿದೆ. ಕೊರೊನಾ ಪರೀಕ್ಷೆ ನಡೆಸುವ ವಿಚಾರದಲ್ಲಿ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಮಾಡಬಾರದು. ಕಂಟೈನ್ಮೆಂಟ್ ಝೋನ್ ಗಳಿಂದಲೇ ಸೋಂಕು ಹರಡುತ್ತಿದೆ. ಆದರೆ ಕಂಟೈನ್ಮೆಂಟ್ ಝೋನ್ ಗಳಲ್ಲಿ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ. ಹೀಗಾಗಿ ರಾಜ್ಯ ಸರಕಾರ ಕಂಟೈನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲನೆ ಮಾಡಲೇ ಬೇಕೆಂಬ ಸಲಹೆಯನ್ನು ನೀಡಿದ್ದಾರೆ.

Leave A Reply

Your email address will not be published.