ಬೆಂಗಳೂರು : ತೆಲಂಗಾಣದಲ್ಲಿ ಬೆಂಗಳೂರಿನ ಟೆಕ್ಕಿಗೆ ಕೊರೊನಾ ಸೋಂಕು ಪತ್ತೆಯಾಗಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದ್ದು, ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇನ್ನು ಮಗಳ ಮದುವೆಯ ಬ್ಯುಸಿಯಲ್ಲಿದ್ದ ಆರೋಗ್ಯ ಸಚಿವ ಶ್ರೀರಾಮುಲು ಆರೋಗ್ಯ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ಕರೆಯಲಾಗಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಟೆಕ್ಕಿಗೆ ಕೊರೊನಾ ವೈರಸ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೈದ್ಯರ 3 ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ರಾಜ್ಯ ಸರಕಾರ, ಜಿಲ್ಲಾಡಳಿತ ಹಾಗೂ ಕೇಂದ್ರ ತಂಡದಿಂದ ತೀವ್ರ ನಿಗಾ ಇರಿಸಲಾಗಿದೆ. ಒಂದೊಮ್ಮೆ ಕೊರೊನಾ ಸೋಂಕು ಪತ್ತೆಯಾದ್ರೆ ಅಂತವರನ್ನು ಕೂಡಲೇ ರಾಜೀವಗಾಂಧಿ ಮೆಡಿಕಲ್ ಕಾಲೇಜಿಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಪತ್ತೆಯಾಗಿರೋ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಆರೋಗ್ಯಾಧಿಕಾರಿಗಳ ತುರ್ತುಸಭೆಯನ್ನು ಕರೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇನ್ನು ರಾಜ್ಯದ ಬೆಂಗಳೂರು, ಮೈಸೂರು, ರಾಯಚೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹರಡಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
