ಬೆಂಗಳೂರು : ಕೊರಾನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ 7,8 ಮತ್ತು 9ನೇ ತರಗತಿಯ ಪರೀಕ್ಷೆಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೂಡಿಕೆ ಮಾಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ವ್ಯಾಪಿಸುತ್ತಿರೋ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಒಂದು ವಾರಗಳ ಕಾಲ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್ ಗಳಿಗೆ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ ಬೇಸಿಗೆ ರಜೆ ನೀಡಿತ್ತು.

ಆದರೆ 7 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಪರೀಕ್ಷೆ ಮಾತ್ರ ಹಾಜರಾಗುವಂತೆ ಸೂಚಿಸಿತ್ತು. ಆದರೆ ಶಿಕ್ಷಣ ಇಲಾಖೆಯ ಕ್ರಮದ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, 7 ರಿಂದ 9ನೇ ತರಗತಿವರೆಗಿನ ಮಕ್ಕಳಿಗೆ ಕೊರೊನಾ ಬರೋದಿಲ್ವಾ ಅಂತಾ ಸರಕಾರಕ್ಕೆ ಚಾಟಿ ಬೀಸಿದ್ದರು.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಾರ್ಚ್ 31ರ ವರೆಗೆ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.