ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕ

ಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಈ ಮೂಲಕ ಹಲವು ಸಮಯಗಳಿಂದ ಬಾಕಿ ಉಳಿದಿದ್ದ ಆಯೋಗಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವಲ್ಲಿ ಸರಕಾರ ಕೊನೆಗೂ ಯಶಸ್ವಿಯಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನದಂದಲೂ ಹಿಂದುಳಿದ ಆಯೋಗಕ್ಕೆ ನೇಮಕಾತಿ ನಡೆದಿರಲಿಲ್ಲ. ಈ ಹಿಂದೆ ಶಾಸಕ ಲಾಲಾಜಿ ಆರ್. ಮೆಂಡನ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದರೂ ಕೂಡ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಇದರ ಬೆನ್ನಲ್ಲೇ ಇದೀಗ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರ್ಗಿಯಲ್ಲಿ ಜನಿಸಿದ ಕೆ.ಜಯಪ್ರಕಾಶ್ ಹೆಗ್ಡೆ ಅವರು ರಾಜ್ಯದ ಪ್ರಭಾವಿ ರಾಜಕಾರಣಿ ಗಳಲ್ಲೊಬ್ಬರು. ಕೆ.ಜಯಪ್ರಕಾಶ್ ಹೆಗ್ಡೆ ಅವರು ಹೈಕೋರ್ಟ್ ನ್ಯಾಯವಾದಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರಾಜಕೀಯ ಕ್ಷೇತ್ರಕ್ಕೆ ಧುಮುಕಿದ ಜಯಪ್ರಕಾಶ್ ಹೆಗ್ಡೆ ಅವರು ಜನತಾ ಪಕ್ಷದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡವರು.

ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ, ಮೀನುಗಾರಿಕಾ ಸಚಿವರಾಗಿ ಬಹಳಷ್ಟು ಜನಪ್ರೀಯತೆಯನ್ನು ಪಡೆದುಕೊಂಡಿದ್ದಾರೆ. ಎರಡು ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾದ ಖ್ಯಾತಿಗೂ ಪಾತ್ರರಾಗಿದ್ದಾರೆ. ಮಾತ್ರವಲ್ಲ ಚಿಕ್ಕಮಗಳೂರು ಉಡುಪಿ ಲೋಕಸಭಾ ಸಂಸದರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ಪಕ್ಷೇತರರಾಗಿ ಗುರುತಿಸಿಕೊಂಡಿದ್ದ ಜಯಪ್ರಕಾಶ್ ಹೆಗ್ಡೆ ಅವರು ನಂತರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಆದರೆ ವಿಧಾನ ಪರಿಷತ್ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರನ್ನಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧಿನಿಯಮ 1995ರ ಪರಿಚ್ಛೇದ 3 ಮತ್ತು 4(1) ಅಡಿಯಲ್ಲಿ ಪದತ್ತವಾದ ಅಧಿಕಾರದನ್ವಯ ಕರ್ನಾಟಕ‌ ಸರಕಾರ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನೇಮಿಸಿದೆ‌ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ-1 ಅವರು ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಹೊರಡಿಸಿದೆ.

Comments are closed.