ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರದಿಂದ ಗ್ರೀನ್ ಸಿಗ್ನಲ್ : ಆದರೆ ಷರತ್ತುಗಳು ಅನ್ವಯ

0

ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಮಾಡುವುದಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಗಣೇಶೋತ್ಸವ ಆಚರಣೆಯ ಕುರಿತು ಅಗಸ್ಟ್ 14 ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಹೊಸ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತಾ ?
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.

ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶೋತ್ಸವ ಸಮಿತಿಗಳು/ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್/ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ/ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡಿಕೊಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವುದಕ್ಕೆ ನಿಷೇಧವನ್ನು ಹೇರಲಾಗಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು.

ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ಜಿಲ್ಲಾಡಳಿತ/ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕರ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜನೆಯನ್ನು ಮಾಡಬೇಕು.

ಇನ್ನು ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಕೊರೊನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸರಳವಾಗಿ ಗಣೇಶೋತ್ಸವ ಆಚರಣೆಯನ್ನು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Leave A Reply

Your email address will not be published.