ಮಂಗಳೂರು : ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅನಿಲ ಸಾಗಾಟದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ವಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರಿನಲ್ಲಿ ನಡೆದಿದೆ.

ಗ್ಯಾಸ್ ತುಂಬಿದ್ದ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮುಂಜಾನೆ ನಾಲ್ಕು ಗಂಟೆಯ ಸುಮಾರಿಗೆ ಟ್ಯಾಂಕರ್ ಪಲ್ಟಿಯಾಗಿರುವ ಕುರಿತು ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಹಾಗೂ ಪೊಲೀಸ್ ಸಿಬ್ಬಂಧಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಗ್ಯಾಸ್ ಸೋರಿಕೆಯಾಗದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಟ್ಯಾಂಕರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ. ಹೀಗಾಗಿ ವಾಹನಗಳನ್ನು ಕಲ್ಲಡ್ಕ, ವಿಟ್ಲ ಮೂಲಕ ಬೆಂಗಳೂರು ಕಡೆ ಸಂಚಾರ ಮಾಡಿದ್ರೆ, ಮಂಗಳೂರಿನ ಕಡೆಗೆ ಪ್ರಯಾಣಿಸುವ ವಾಹನಗಳು ಮಾಣಿ, ಬುಡೋಳಿ, ಕಬಕ ಮೂಲಕ ಸಂಚಾರ ನಡೆಸಲಿವೆ.

ಸ್ಥಳಕ್ಕೆ ವಿಟ್ಲ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಟ್ಯಾಂಕರ್ ತೆರವು ಮಾಡುವ ನಿಟ್ಟಿನಲ್ಲಿ ಅಗ್ನಿಶಾಮಕ ಸಿಬ್ಬಂಧಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಮಂಗಳೂರು ಬೆಂಗಳೂರು ಹೆದ್ದಾರಿಯಲ್ಲಿ ಅಪಾಯಕಾರಿ ತಿರುವುಗಳಿರುವುದೇ ಇಂತಹ ಅವಘಡಗಳು ಸಂಭವಿಸುವುದಕ್ಕೆ ಕಾರಣವಾಗುತ್ತಿದೆ.