ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಶಾಲಾರಂಭವಾಗಿಲ್ಲ. ಈ ನಡುವಲ್ಲೇ ಪೋಷಕರಿಗೆ ಗುಡ್ ನ್ಯೂಸ್ ಕೊಡಲು ರಾಜ್ಯ ಸರಕಾರ ಮುಂದಾಗಿದ್ದು, ಶಾಲಾ ಶುಲ್ಕದಲ್ಲಿ ಶೇ.30 ರಿಂದ 35 ರಷ್ಟು ಕಡಿತವಾಗುವ ಸಾಧ್ಯತೆಯಿದೆ.
ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು ಈಗಾಗಲೇ ಪ್ರಸ್ತುವ ಶೈಕ್ಷಣಿಕ ವರ್ಷಕ್ಕೆ ಶಾಲಾ ಶುಲ್ಕದಲ್ಲಿ ಕಡಿಮೆ ಮಾಡುವಂತೆ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದರು. ಅಲ್ಲದೇ ಜನವರಿ 13ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪೋಷಕರ ಸಂಘಟನೆ ಹಾಗೂ ಖಾಸಗಿ ಶಾಲೆಗಳ ಸಂಘಟನೆಗಳೊಂದಿಗೆ ಸಭೆ ನಡೆಸಿ ಶುಲ್ಕ ಕಡಿತಕ್ಕೆ ಈಗಾಗಲೇ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.
ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ ಶೇ.30ರಿಂದ 35 ರಷ್ಟು ಶುಲ್ಕ ಕಡಿತವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.