ಬೆಂಗಳೂರು : ಕಳೆದೊಂದು ವಾರದಿಂದಲೂ ಕರಾವಳಿ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದೀಗ ಮತ್ತೆ ಸಪ್ಟೆಂಬರ್ 17ರ ವರೆಗೂ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಇಂದಿನಿಂದ ಸೆಪ್ಟೆಂಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ವಿಪರೀತ ಮಳೆ ಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸೂಚಿಸಲಾಗಿದೆ.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಮುಂಬೈ ಕರ್ನಾಟಕದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಕೊಡಗಿನಲ್ಲಿ 2 ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.

ದಕ್ಷಿಣ ಕನ್ನಡ,ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಲೆನಾಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.