ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶಾಕ್….! ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ರದ್ದು…!

ಬೆಂಗಳೂರು: ಕರ್ನಾಟಕ ಸರ್ಕಾರ ಬಿಡುಗಡೆಗೊಳಿಸಿದ್ದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪಟ್ಟಿಯನ್ನು ರದ್ದುಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.

ನವೆಂಬರ್ 8 ರಂದು ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪಟ್ಟಿ ಪ್ರಕಟಿಸಿತ್ತು. ಆದರೆ ಈ ಮೀಸಲಾತಿ ಪಟ್ಟಿ ಪ್ರಶ್ನಿಸಿ ಹಲವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು.

ಸರ್ಕಾರ ಹೊರಡಿಸಿದ್ದ ಮೀಸಲಾತಿ ಪಟ್ಟಿಯನ್ನು ರದ್ದುಗೊಳಿಸಿ ಹೈಕೋರ್ಟ್ ನ ಏಕಸದಸ್ಯ ಪೀಠ ಗುರುವಾರ ಆದೇಶ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 10 ದಿನಗಳ ಕಾಲಾವಕಾಶ ನೀಡಿದೆ.

ಪ್ರಸ್ತುತ ಹೈಕೋರ್ಟ್ ಆದೇಶದ ಅನ್ವಯ ನ್ಯಾಯಾಲಯದ ಮುಂದಿನ ಆದೇಶದವರೆಗೆ ರಾಜ್ಯದ 227 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಅಮಾನತ್ತಿನಲ್ಲಿರಲಿದೆ. ಸರ್ಕಾರದ ಮೇಲ್ಮನವಿ ಬಳಿಕ ನ್ಯಾಯಾಲಯ ವಿಚಾರಣೆ ನಡೆಸಿ ಅಂತಿಮ ತೀರ್ಪು ಪ್ರಕಟಿಸಲಿದೆ.

ಹಲವೆಡೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಸ್ಪಷ್ಟ ಮೀಸಲಾತಿ ಪಡೆದಿದ್ದರೂ, ಮೀಸಲಾತಿ ಅನ್ವಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿತ್ತು. ಈ ನಿಟ್ಟಿನಲ್ಲಿ ಹಲವರು ಮೀಸಲಾತಿ ಪಟ್ಟಿ ಪ್ರಶ್ನಿಸಿ ರಾಜ್ಯ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು.

Comments are closed.