ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಇಂದು ಕೇರಳ ಕರಾವಳಿಗೆ ನೈರುತ್ಯ ಮುಂಗಾರು ಮಾರುತಗಳು ಅಪ್ಪಳಿಸಲಿದ್ದು, ಕರ್ನಾಟಕಕ್ಕೆ ಜೂನ್ 5 ರಂದು ಮುಂಗಾರು ಆಗಮನ ದ ಸಾಧ್ಯತೆಯಿದೆ. ಕೇರಳಕ್ಕೆ ಮುಂಗಾರು ಆಗಮನದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 3 ಮತ್ತು 6ರವರೆಗೆ ವ್ಯಾಪಕ ಮಳೆಯಾಗಲಿದೆ. ಅಲ್ಲದೇ ಜೂನ್ 4ರವರೆಗೆ ಕರ್ನಾಟಕದ ಬೀದರ್, ಕಲಬುರಗಿ, ಬೆಂ.ಗ್ರಾಮಾಂತರ, ಬೆಂ.ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.