ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಡಿಸೆಂಬರ್ ಅಂತ್ಯದ ವರೆಗೂ ಶಾಲಾರಂಭವಿಲ್ಲ ಎಂದು ಘೋಷಿಸಿದ್ದಾರೆ.
ಶಾಲೆ ಹಾಗೂ ಪದವಿ ಕಾಲೇಜುಗಳನ್ನು ಆರಂಭಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ಅಧಿಕಾರಿಗಳು ಹಾಗೂ ತಜ್ಞರ ಅಭಿಪ್ರಾಯವನ್ನು ಆಲಿಸಿದರು. ಸಭೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳ ಆರಂಭ ಬೇಡ ಅನ್ನುವ ನಿರ್ಧಾರಕ್ಕೆ ಬರಲಾಯಿತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ, ಡಿಸೆಂಬರ್ ಅಂತ್ಯದ ವರೆಗೂ ಶಾಲಾರಂಭ ಮಾಡುವುದಿಲ್ಲ. ಆಲ್ಲದೇ ಡಿಸೆಂಬರ್ ಅಂತ್ಯದಲ್ಲಿ ಸಭೆಯನ್ನು ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಪದವಿ ತರಗತಿಗಳು ಆರಂಭವಾಗಿದ್ದು, ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಾತಿ, ವಿದ್ಯಾರ್ಥಿಗಳಿಗೆ ಸೋಂಕು ಬಂದಿರುವ ಕುರಿತು ಚರ್ಚೆ ನಡೆಸಲಾಯಿತು. ಶಾಲಾರಂಭ ಕುರಿತು ಶಿಕ್ಷಣ ಇಲಾಖೆಯ ಆಯುಕ್ತ ಅನ್ಬು ಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ವರದಿಯನ್ನು ಸಲ್ಲಿಸಿದ್ದಾರೆ.
ಸಭೆಯಲ್ಲಿ ಹಾಜರಿದ್ದ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಡಿಸೆಂಬರ್ ಅಂತ್ಯದ ವರೆಗೂ ಶಾಲಾರಂಭ ಬೇಡ ಅನ್ನುವ ಕುರಿತು ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಈಗಾಗಲೇ ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಅಲೆ ಶುರುವಾಗಿದೆ. ಸದ್ಯದಲ್ಲಿಯೇ ಚಳಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದ ವರೆಗೂ ಶಾಲಾರಂಭ ಮಾಡುವುದು ಸೂಕ್ತವಲ್ಲ ಅನ್ನೋ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.