ಮಂಗಳೂರು : ಕೇರಳದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಕೇರಳ ರೋಗಿಗಳನ್ನು ದಾಖಲು ಮಾಡಿಕೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಕೇರಳ ಗಡಿ ತೆರವು ಮಾಡುವ ವಿಚಾರವಾಗಿ ಚರ್ಚೆಗಳು ನಡೆಯುತ್ತಿರೋ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಅವರ ನೇತೃತ್ವದಲ್ಲಿ ನಡೆದ ಸಭೆಯ ನಿರ್ಣಯದಂತೆ ಆದೇಶ ಹೊರಡಿಸಲಾಗಿದೆ.

ಕೊರೊನಾ (ಕೋವಿಡ್ -19) ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಕೇರಳದ ಯಾವುದೇ ರೋಗಿಗಳನ್ನು ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಳ್ಳಬಾರದು ಅಂತಾ ಮಂಗಳೂರಿನ 8 ಖಾಸಗಿ ಆಸ್ಪತ್ರೆಗಳಿಗೆ ಸೂಚನೆಯನ್ನು ನೀಡಲಾಗಿದೆ. ಆರೋಗ್ಯ ಇಲಾಖೆಯ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಅವರು ಸೂಚನೆ ನೀಡಿದ್ದಾರೆ.