ಕುಕ್ಕೆ ಸುಬ್ರಹ್ಮಣ್ಯ : ರಾಜ್ಯದ ಪವಿತ್ರ ಪುಣ್ಯಕ್ಷೇತ್ರವಾಗಿರೋ ಕುಕ್ಕೆ ಸುಬ್ರಹ್ಮಣ್ಯಕ್ಕೂ ಕೊರೊನಾ ವೈರಸ್ ಎಫೆಕ್ಟ್ ತಟ್ಟಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ, ನಾಗ ಪ್ರತಿಷ್ಟೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳಲ್ಲಿ ಕುಟುಂಬ ಒಬ್ಬರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಓರ್ವ ಬಲಿಯಾಗಿದ್ದರೆ, 6 ಮಂದಿಗೆ ಕೊರೊನಾ ವೈರಸ್ ಇರೋದು ದೃಢಪಟ್ಟಿತ್ತು. ಅಲ್ಲದೇ ಶಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿಯೇ ಭಕ್ತರ ಮೇಲೆ ಕಣ್ಣಿಟ್ಟಿರೋ ದೇವಸ್ಥಾನದ ಆಡಳಿತ ಮಂಡಳಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯೋ ಸರ್ಪ ಸಂಸ್ಕಾರ, ಆಶ್ಲೇಷಾ ಬಲಿ ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳಲ್ಲಿ ಇಷ್ಟು ದಿನ ಕುಟುಂಬ ಸದಸ್ಯರು ಪಾಲ್ಗೊಳ್ಳುತ್ತಿದ್ದರು.

ಆದರೆ ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಓರ್ವರಿಗಷ್ಟೇ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಕೊರೊನಾ ವೈರಸ್ ಭೀತಿಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ಆದರೆ ಹೊರ ರಾಜ್ಯದಿಂದ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.