ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಭಾರೀ ಅವಾಂತರ ಸೃಷ್ಟಿಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಭಾಗಮಂಡಲದ ಬಳಿಯ ಚೇರಂಗಾಲ ಗ್ರಾಮದಲ್ಲಿ ಗುಡ್ಡ ಕುಸಿತವಾಗಿದ್ದು ಭಾಗಮಂಡಲ -ತಲಕಾವೇರಿಗೆ ಸಂಪರ್ಕ ಕಡಿತಗೊಂಡಿದೆ. ಭಾಗಮಂಡಲ, ಚೇರಂಗಾಲ, ನಾಪೋಕ್ಲು ಭಾಗಮಂಡಲ ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಈಗಾಗಲೇ ಜಿಲ್ಲಾಡಳಿತ, ಎನ್ ಡಿಆರ್ ಎಫ್ ತಂಡ ಕಾರ್ಯಾಚಾರಣೆಯನ್ನು ನಡೆಸುತ್ತಿದೆ.

ತಡರಾತ್ರಿಯವರೆಗೂ ಕಾರ್ಯಚರಣೆಯನ್ನು ನಡೆಸಿ ರಸ್ತೆಯ ಮೇಲಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗಿದೆ. ಆದರೆ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ರೆಡ್ ಆಲರ್ಟ್ ಘೋಷಿಸಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವವರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನಿಡಿದೆ.