ಬ್ರಹ್ಮಾವರ : ಫಾಸ್ಟ್ಯಾಕ್ ಕಡ್ಡಾಯಗೊಳಿಸಿದ ಬೆನ್ನಲ್ಲೇ ಸಾಸ್ತಾನ ಟೋಲ್ ನಲ್ಲಿ ಸ್ಥಳೀಯರಿಗೆ ಟೋಲ್ ವಿನಾಯಿತಿ ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಜಾಗೃತಿ ಸಮಿತಿಯ ಹೋರಾಟ ತೀವ್ರಗೊಂಡಿದ್ದು, ಫೆಬ್ರವರಿ 22ರಂದು ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ.

ಕೇಂದ್ರ ಸರಕಾರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಫಾಸ್ಟ್ಯಾಗ್ ಕಡ್ಡಾಯಗೊಳಿಸಿದೆ. ಆದರೆ ನವಯುಗ ಕಂಪೆನಿ ಇದಕ್ಕೆ ಬಂಡವಾಳ ಮಾಡಿಕೊಂಡು ಸ್ಥಳೀಯರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬೃಹತ್ ಹೋರಾಟ ನಡೆಸಿ ಟೋಲ್ ಬಂದ್ ಮಾಡಿದ್ದ ಹೋರಾಟಗಾರರು ಇಂದು ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಸಾರ್ವಜನಿಕರು ಹೆದ್ದಾರಿ ಜಾಗೃತಿ ಸಮಿತಿಯ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ.

ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಸಭೆಯ ಬಳಿಕ ಸಾಸ್ತಾನ ಟೋಲ್ ವರೆಗೆ ಮೌನ ಪ್ರತಿಭಟನೆ ನಡೆಸಿದರು. ಆದರೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಈ ವೇಳೆಯಲ್ಲಿ ಅಹವಾಲು ಸ್ವೀಕಾರ ಮಾಡಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ ಅವರು ಸ್ಥಳೀಯರಿಗೆ ವಿನಾಯಿತಿ ವಿಚಾರವಾಗಿ ಒಂದು ದಿನದ ಕಾಲಾವಕಾಶ ನೀಡುವಂತೆ ಕೇಳಿದ್ದಾರೆ. ದಿಶಾ ಸಭೆಯ ವರೆಗೆ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡುವಂತೆ ಸೂಚಿಸಿದ್ದಾರೆ. ನವಯುಗ ಕಂಪೆನಿಯ ಮ್ಯಾನೇಜರ್ ಶಿವಪ್ರಸಾದ್ ಅವರು ಕೂಡ ದಿಶಾ ಸಭೆ ನಡೆಯುವ ತನಕ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡುವುದಕ್ಕೆ ಒಪ್ಪಿಗೆಯನ್ನು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೌನ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಟೋಲ್ ನಲ್ಲಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳ ಲಾಗಿತ್ತು.

ಹೆದ್ದಾರಿ ಜಾಗೃತಿ ಸಮಿತಿಯ ಪ್ರತಾಪ್ ಶೆಟ್ಟಿ, ವಿಠಲ್ ಪೂಜಾರಿ, ಆಲ್ವಿನ್ ಅಂದ್ರಾದೆ, ಕಾರ್ಕಡ ರಾಜು ಪೂಜಾರಿ, ವಿನಯ್ ಕಬ್ಯಾಡಿ, ಪ್ರಶಾಂತ್ ಶೆಟ್ಟಿ, ರಾಜೇಶ್ ಸೇರಿದಂತೆ ನೂರಾರು ಸಂಖ್ಯೆ ಯಲ್ಲಿ ವಾಹನ ಸವಾರರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಫೆಬ್ರವರಿ 22 ರಂದು ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದರ ಮೂಲಕ ಸ್ವಯಂಪ್ರೇರಿತರಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಅಂದು ಬೆಳಗ್ಗೆ 9.30ಕ್ಕೆ ಸಾಸ್ತಾನದ ಟೋಲ್ ಪ್ಲಾಜಾಗದಲ್ಲಿ ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ. ಪ್ರತಿಭಟನೆಯಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಹೋರಾಟದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೆದ್ದಾರಿ ಜಾಗೃತಿ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ ನಾಯರಿ ಅವರು ಮನವಿ ಮಾಡಿದ್ದಾರೆ.