SSLC, PUC ತರಗತಿ ಆರಂಭ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಶಾಲೆಗಳು ಆರಂಭಗೊಂಡಿಲ್ಲ. ಆದ್ರೆ ಈ ಬಾರಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಈ ಕುರಿತು ಮಾಸಾಂತ್ಯದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲೆ, ಕಾಲೇಜುಗಳನ್ನು ಆರಂಭಿಸುವ ಕುರಿತು ಡಿಸೆಂಬರ್ 2ರಂದು ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಎಲ್ಲಾ ಸದಸ್ಯರು ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಬೇಕೆಂದು ಒಕ್ಕೋರಲಿನಿಂದ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯಕ್ಕೆ ಸಭೆ ನಡೆಸಲು ದಿನಾಂಕವನ್ನು ನಿಗದಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನು ವಿದ್ಯಾಗಮ ಕಾರ್ಯಕ್ರಮವನ್ನು ಪುನರಾರಂಭಿಸುವ ಕುರಿತು ರೂಪುರೇಷೆಗಳನ್ನು ಸಿದ್ದಪಡಿಸುವಂತೆಯೂ ಸೂಚನೆಯನ್ನು ನೀಡಲಾಗಿದ್ದು, ಸಿಆರ್ ಪಿ ಮತ್ತು ಬಿಆರ್ ಪಿ ಗಳಿಗೆ ಈ ಸಾಲಿನ ವರ್ಗಾವಣೆಯಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತದೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಕಡ್ಡಾಯ ವರ್ಗಾವಣೆಗೊಳಗಾಗಿದ್ದಲ್ಲಿ ಅವರಿಗೂ ಸಹ ಈ ಬಾರಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳಿಗೆ ನೀಡಲಾದ ಎಲ್ಲಾ ವಿಶೇಷ ಭತ್ಯೆಗಳನ್ನು ವಸೂಲಿ ಮಾಡುವಲ್ಲಿ ಸಿ ಮತ್ತು ಡಿ ಗುಂಪಿಗೆ ಸೇರಿದ ನೌಕರರಿಂದ ವಸೂಲಾತಿ ಮಾಡಬಾರದೆಂಬ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪರಾಮರ್ಷಿಸಿ ಮಂಡಿಸಬೇಕು. ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಿ ನಿರ್ಣಯವನ್ನು ತೆಗೆದುಕೊಳ್ಳುವರೆಗೆ ವಸೂಲಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಹೊಸದಾಗಿ ನೇಮಕಗೊಂಡ ಸೇವಾ ನಿರತ ಪದವಿ ಪೂರ್ವ ಶಿಕ್ಷಣ ಉಪನ್ಯಾಸಕ ಅಭ್ಯರ್ಥಿಗಳ ಪೈಕಿ ಹಲವು ಅಭ್ಯರ್ಥಿಗಳು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳಿಂದ ನಿರಪೇಕ್ಷಣಾ ಪ್ರಮಾಣ ಪತ್ರಗಳನ್ನು ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಕುರಿತು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕು.

ಇನ್ನು ಆರ್ಥಿಕ ಮಿತವ್ಯಯದ ಹಿನ್ನೆಲೆಯಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದ್ದು ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಖೂಡಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕೆಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಪ್ರ ಧಾನ ಕಾರ್ಯದರ್ಶಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

Comments are closed.