ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಮತ್ತೊಂದು ಬಲಿಪಡೆದಿದೆ. ಅನಾರೋಗ್ಯದಿಂದಾಗಿ ಹೃದಯಾಘಾತದಿಂದ ಮೃತಪಟ್ಟ ವೃದ್ದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಅನಾರೋಗ್ಯದಿಂದಾಗಿ ಸುಳ್ಯದ ಕೆರೆಮೂಲೆಯ ನಿವಾಸಿಯಾಗಿರುವ ವೃದ್ದೆಯನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಯ ಸಿಬ್ಬಂದಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸಿದಾಗ ಐಸಿಯುನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಗೆ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ವೃದ್ದೆಯ ಗಂಟಲು ದ್ರವದ ಪರೀಕ್ಷೆಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.

ಆದ್ರೆ ಕೊರೊನಾ ವರದಿ ಕೈ ಸೇರುವ ಮೊದಲು ವೃದ್ದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ವೃದ್ದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಆತಂಕ ಶುರುವಾಗಿದೆ.