ಉಡುಪಿ : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕೆ ಇಲ್ಲಾ ಸೀಲ್ ಡೌನ್ ಆದೇಶ ಜಾರಿ ಮಾಡಬೇಕೆ ಅನ್ನುವ ಕುರಿತು ನಾಳೆ ನಡೆಯಲಿರುವ ಜನಪ್ರತಿನಿಧಿಗಳ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಮಗ್ರ ಮಾಹಿತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ನೀಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಜಿಲ್ಲಾಡಳಿತ ಪಾಲನೆ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ಜಿಲ್ಲೆಯ ಗಡಿಗಳನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿದ್ರೆ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಸಾಧ್ಯವೆನ್ನುವ ಮಾಹಿತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಯಾವುದೇ ನಿರ್ಣಯವನ್ನು ಕೈಗೊಳ್ಳಬಹುದೆಂದು ಅವರು ಸೂಚನೆಯನ್ನು ನೀಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿ ಮಾಡಬೇಕೆ. ಇಲ್ಲಾ ಸೀಲ್ ಡೌನ್ ಆದೇಶ ಜಾರಿಗೊಳಿಸಬೇಕೆ ಎನ್ನುವ ಕುರಿತು ನಾಳೆ ನಡೆಯಲಿರುವ ಜನಪ್ರತಿನಿಧಿಗಳ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ನಿರ್ಣಯವನ್ನು ಕೈಗೊಳ್ಳುವುದಾದರೂ ಕೂಡ ಜನರಿಗೆ ಸಮಸ್ಯೆಯಾಗದಂತೆ ಕಾಲಾವಕಾಶವನ್ನು ಕೊಟ್ಟು ನಿರ್ಣಯವನ್ನು ಕೈಗೊಳ್ಳುತ್ತೇವೆ. ಜಿಲ್ಲೆಯ ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡಾ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.