ಚಿಕ್ಕಮಗಳೂರು : ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ರೈಲ್ವೆ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖೆಯ ಬಿಸಿ ವಿಧಾನ ಪರಿಷತ್ ಸದಸ್ಯರಿಗೂ ತಟ್ಟುವ ಸಾಧ್ಯತೆಯಿದೆ.
ಡಿಸೆಂಬರ್ 28ರಂದು ವಿಧಾನ ಪರಿಷತ್ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿಯಲ್ಲಿ ರೈಲಿಗೆ ತಲೆಕೊಟ್ಟ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು. ಧರ್ಮೇಗೌಡರ ಆತ್ಮಹತ್ಯೆಗೂ ಮುನ್ನೆ ಬರೆದಿರುವ ಡೆತ್ ನೋಟ್ ನಲ್ಲಿ ವಿಧಾನ ಪರಿಷತ್ ನಲ್ಲಿ ನಡೆದಿರುವ ಗಲಾಟೆಯ ಬಗ್ಗೆ ಉಲ್ಲೇಖಿಸಿದ್ದಾರೆ. ಘಟನೆಯ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿರುವ ಟೀಕೆಯಿಂದ ಮನನೊಂದಿರುವ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ.
ಡೆತ್ ನೋಟ್ ನಲ್ಲಿ ಕೌಟುಂಬಿಕ ವಿಚಾರದ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ 120 ಎಕರೆ ಜಮೀನು, ಬೆಂಗಳೂರಿನಲ್ಲಿರುವ ಮನೆ ಹಾಗೂ ಆಸ್ತಿಯ ಬಗ್ಗೆಯೂ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಈಗಾಗಲೇ ರೈಲ್ವೆ ಪೊಲೀಸರು ಧರ್ಮೇಗೌಡ ಅವರ ಪತ್ನಿ, ಮಕ್ಕಳು, ಸಂಬಂಧಿಕರ ವಿಚಾರಣೆಯನ್ನು ಪೂರ್ಣಗೊಳಿಸಿದ್ದಾರೆ. ಡೆತ್ ನೋಟ್ ನಲ್ಲಿ ವಿಧಾನ ಪರಿಷತ್ ಗದ್ದಲದ ಕುರಿತು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.