ಉಡುಪಿ/ ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಉತ್ತಮ ಮಳೆ ಸುರಿಯುತ್ತಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಕಾಪು, ಹೆಬ್ರಿ, ಕಾರ್ಕಳ, ಬೈಂದೂರು ತಾಲೂಕಿನಲ್ಲಿ ಭಾರಿ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರು, ಸುಳ್ಯ, ಪುತ್ತೂರು ಭಾಗಗಳಲ್ಲಿಯೂ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಅಂತೆಯೇ ಇದೀಗ ಮಳೆ ಸುರಿಯುತ್ತಿದ್ದು, ನಾಳೆ ಹಾಗೂ ನಾಡಿದ್ದು ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶ ಹಾಗೂ ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನೀಡಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಭತ್ತದ ಬೆಳೆಗೆ ಹಾನಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.