ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಕುಂದಾಪುರದ ಮೂಲದ ಯುವಕನ ಬಂಧನ

ಉಡುಪಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಮೂಲದ ಯುವಕನನ್ನು ಬಂಧಿಸಲಾಗಿದೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಹಾಗೂ ಐಟಿ‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ ನಿವಾಸಿ ಇಮ್ರಾನ್‌ (24 ವರ್ಷ) ಬಂಧಿತ ಆರೋಪಿ. 12 ವರ್ಷ ಪ್ರಾಯದ ಬಾಲಕಿಗೆ ಇಮ್ರಾನ್‌ ಲೈಂಗಿಕ ಕಿರುಕುಳ ನೀಡುತ್ತಿರುವ ಕುರಿತು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯ ಮನೆಗೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಕಾರ್ಕಳ ನಗರ ಠಾಣೆಯ ಪೊಲೀಸರು ಇದೀಗ ಆರೋಪಿಯನ್ನು ಬಂದಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಅಪ್ರಾಪ್ತ ಬಾಲಕಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಆಪ್ತಸಮಾಲೋಚಕಿ ಅಂಬಿಕಾ, ಸಾಮಾಜಿಕ ಕಾರ್ಯಕರ್ತ ಯೋಗಿಶ್, ಕಾರ್ಕಳ ನಗರ ಠಾಣಾ ಸಿಬ್ಬಂದಿಗಳಾದ ಶ್ಯಾಮ್, ರವೀಂದ್ರ ಇನ್ನಿತರರು ಸಹಕರಿಸಿದ್ದರು.

Comments are closed.