ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಸಪ್ಟೆಂಬರ್ 21 ಮತ್ತು 22ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ಅದ್ರಲ್ಲೂ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಮಾತ್ರವಲ್ಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ಮುಂದಿನ 5ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ.19ರಂದು ಯೆಲ್ಲೋ, ಸೆ.20ರಂದು ಆರೆಂಜ್ ಹಾಗೂ ಸೆ.21 ಮತ್ತು ಸೆ.22ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಮಲೆನಾಡಿನ ಜಿಲ್ಲೆಗಳಾಗಿರುವ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಸೆ.19ರಂದು ಯೆಲ್ಲೋ ಅಲರ್ಟ್, ಸೆ.20, 21ರಂದು ಆರೆಂಜ್ ಅಲರ್ಟ್ ಹಾಗೂ ಸೆ.22ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆಯನ್ನು ಮಾಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರಲ್ಲಿ ಮೋಡಕವಿದ ವಾತಾವರಣ ವಿದ್ದು, ಆಗಾಗ ಮಳೆಯಾಗುವ ಸಾಧ್ಯತೆಯಿದೆ.

ರೆಡ್ ಅಲರ್ಟ್ ಘೋಷಣೆಯಾಗಿರುವ ದಿನಗಳಂದು ಸರಾಸರಿ 204.5 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ತೀರುದದ್ದಕ್ಕೂ ಗಾಳಿ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ.