ಬೆಂಗಳೂರು : ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಶುರುವಾಗಿದ್ದು, ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಹವಾ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಕೊಡುಗು, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಲ್ಲಿ ನಾಳೆಯವರೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಆ.29 ಮತ್ತು 30ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ ?
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದಿದ್ದಾರೆ. ಅರಬ್ಬಿ ಸಮುದ್ರದ ಕರ್ನಾಟಕ, ಕೇರಳ ಭಾಗದಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿರುವ ಪ್ರದೇಶ ಉಂಟಾಗಿರುವ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುತ್ತಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಇದೇ ರೀತಿ ಮಳೆಯಾಗುತ್ತಿದ್ದು, ಸೋಮವಾರದವರೆಗೆ ಮಳೆ ಮುಂದುವರೆಯುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಹೇಳಿದ್ದಾರೆ. ಮುಂಗಾರು ಚುರುಕಾಗಿರುವುದರಿಂದ ಕಾವೇರಿ ಜಲಾನಯನ ಭಾಗದಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಮುಂದಿನ ಮೂರು ದಿನಗಳ ಕಾಲ ನಿರೀಕ್ಷೆಯಂತೆ ಭಾರೀ ಮಳೆಯಾದರೆ ಪ್ರಮುಖ ಜಲಾಶಯಗಳಿಗೂ ಒಳಹರಿವು ಹೆಚ್ಚಾಗಲಿದೆ.